ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

 ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಮೈಸೂರು : ಮೈಸೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ನಡೆದ 85 ಗಂಟೆಗಳ ಬಳಿಕ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಅವರುಗಳ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಆಗಸ್ಟ್‌ 24 ರಂದು ನಡೆದಿದ್ದ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಇದರ ಮಧ್ಯೆ ಆಡಳಿತಾರೂಢ ಪಕ್ಷದ ಕೆಲ ಸಚಿವರು ಸೇರಿದಂತೆ ಹಲವರು ನೀಡಿದ್ದ ಹೇಳಿಕೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡ ರಚಿಸಿದ್ದರು. ಘಟನೆ ನಂತರ ಹೊರರಾಜ್ಯಕ್ಕೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಇಂದು ಮುಂಜಾನೆ ವೇಳೆಗೆ ತಮಿಳುನಾಡಿನಲ್ಲಿ ವಶಕ್ಕೆ ಪಡೆದಿದ್ದಾರೆ.